ರುಕ್ಮಿಣಿ ವಸಂತ್​ ಡೀಪ್​ಫೇಕ್​ ವಿಡಿಯೋ: ಮೂವರ ಬಂಧನ

ನಟಿ ರುಕ್ಮಿಣಿ ವಸಂತ್ ಬಿಕಿನಿಯಲ್ಲಿರುವ AI ಫೋಟೋ ಮತ್ತು ವಿಡಿಯೋ ವೈರಲ್ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ.

ಆರೋಪಿಗಳು ರುಕ್ಮಿಣಿ ವಸಂತ್​ ಅವರ ಡೀಪ್​ಫೇಕ್​ ವಿಡಿಯೋವನ್ನು ವೈರಲ್ ಮಾಡಿದ್ದರು. ಆ ವಿಡಿಯೋದಲ್ಲಿ ಅವರು ಬಿಕಿನಿ ಧರಿಸಿ ಸ್ವಿಮ್ಮಿಂಗ್ ಪೂಲ್‌ನಿಂದ ಹೊರಬರುತ್ತಿರುವ ದೃಶ್ಯವನ್ನು ತೋರಿಸಲಾಗಿತ್ತು. ಆದರೆ ಅದು ನಿಜವಾದ ವಿಡಿಯೋ ಅಲ್ಲ ಎಂಬುದು ನಂತರ ಬೆಳಕಿಗೆ ಬಂದಿತ್ತು.

ಆರೋಪಿಗಳು AI ತಂತ್ರಜ್ಞಾನವನ್ನು ಬಳಸಿಕೊಂಡು ಅಶ್ಲೀಲ ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿರುವುದು ತನಿಖೆ ವೇಳೆ ಕಂಡು ಬಂದಿದೆ. ಅಪರಾಧದಲ್ಲಿ ಬಳಸಲಾದ ಮೂರು ಮೊಬೈಲ್ ಫೋನ್‌ಗಳನ್ನು ಅವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು,  ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೀಪ್‌ಫೇಕ್ ವಿಡಿಯೋ ವೈರಲ್ ಆದ ಬಳಿಕ  ರುಕ್ಮಿಣಿ ವಸಂತ್  ತಮ್ಮ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಈ ವಿಡಿಯೋ ಸೃಷ್ಟಿಸಲಾಗಿದೆ ಎಂದು ಆರೋಪಿಸಿ  ಪೊಲೀಸರಿಗೆ ದೂರು ನೀಡಿದ್ದರು.  ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಿ ತನಿಖೆ   ಆರಂಭಿಸಲಾಗಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

—–

 

Be the first to comment

Leave a Reply

Your email address will not be published. Required fields are marked *

Translate »
error: Content is protected !!