ಗೌಡ & ಗೌಡ್ತಿಯ ಅದ್ದೂರಿ ಚಿತ್ರ!

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ದೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದವರು ನಿರ್ಮಾಪಕ ರಾಮು. ಅದರಲ್ಲೂ ಆಕ್ಷನ್ ಚಿತ್ರಗಳ ನಿರ್ಮಾಣದಲ್ಲಿ ಈ ಸಂಸ್ಥೆ ತನ್ನದೇ ಆದ ಹೆಸರು ಮಾಡಿದೆ. ಪ್ರಸ್ತುತ ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಅರ್ಜುನ್ ಗೌಡ” ಚಿತ್ರ‌ ಕೂಡ ಆಕ್ಷನ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ.ಅಪಾರ ವೆಚ್ಚದಲ್ಲಿ ,ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗಿರುವ ಅರ್ಜುನ್ ಗೌಡ ಚಿತ್ರದ ಟ್ರೇಲರ್ ಏಪ್ರಿಲ್ 10 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಲಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.

ಈ ವರ್ಷ ಬಿಡುಗಡೆಯಾಗಿ ಜನಪ್ರಿಯವಾಗಿರುವ ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‌ಪೆಕ್ಟರ್ ವಿಕ್ರಮ್ ಚಿತ್ರದ ನಂತರ ಬಿಡುಗಡೆಯಾಗುತ್ತಿರುವ ಅರ್ಜುನ್ ಗೌಡ ಚಿತ್ರದ ಬಿಡುಗಡೆಗೆ ಪ್ರಜ್ವಲ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದೆ.
ಮಾಸ್ ಮಾದ ಸಾಹಸ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಚಿತ್ರದ ಆಕ್ಷನ್ ಸನ್ನಿವೇಶಗಳು. ನೋಡುಗರ ಮೈ ಜುಂ ಎನಿಸುತ್ತದೆ.

ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!