ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕೃತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಡಾಲಿ ಧನಂಜಯ ಅಭಿನಯದ ಹೆಡ್ಬುಷ್ ಚಿತ್ರ ವಿವಾದಕ್ಕೆ ಸಿಲುಕಿದ್ದು, ವೀರಗಾಸೆ ಸಂಸ್ಕೃತಿಗೆ ಅಪಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುನಿಲ್ ಕುಮಾರ್, ‘ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ’ ಎಂದು ಅವರು ತಿಳಿಸಿದ್ದಾರೆ.
‘ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆ ಕಲಾವಿದನಿಗೆ ಒದೆಯಲಾಗಿದೆ. ಇದು ವೀರಭದ್ರನಿಗೆ ಮಾಡಿದ ಅಪಮಾನ’ ಎಂದು ಆರೋಪಿಸಲಾಗುತ್ತಿದೆ. ಈ ಬಗ್ಗೆ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ನಟ ಡಾಲಿ ಧನಂಜಯ್ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ‘ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದು, ವೀರಗಾಸೆಗೆ ಅವಮಾನಿಸುವ ಯಾವ ಅಂಶವು ಇಲ್ಲದಂತೆ ನೋಡಿಕೊಂಡಿದ್ದೇನೆ. ದೂಷಿಸುವವರು ದಯವಿಟ್ಟು ಸಿನಿಮಾ ನೋಡಿ. ಕೂಲಂಕಷವಾಗಿ ವಿಮರ್ಶಿಸಬೇಕಾಗಿ ಕೇಳಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.
ಹೆಡ್ ಬುಷ್ ಚಿತ್ರವನ್ನು ಡಾಲಿ ನಿರ್ಮಾಣ ಮಾಡಿದ್ದಾರೆ. ಇದು ಡಾನ್ ಆಗಿದ್ದ ಜಯರಾಜ್ ಜೀವನ ಕಥೆ ಹೊಂದಿದೆ. ಚಿತ್ರವನ್ನು ಶೂನ್ಯ ನಿರ್ದೇಶನ ಮಾಡಿದ್ದಾರೆ.
__
Be the first to comment