ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ರಿಷಬ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ ‘ಶಿವಮ್ಮ’ ಜೂನ್ 14ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ.
ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.
“ಜೈಶಂಕರ್ ಅವರು “ಶಿವಮ್ಮ” ಚಿತ್ರದ ಕಥೆ ಕುರಿತಾಗಿ ಹೇಳಿದರು. ಕಥೆ ಇಷ್ಟವಾಯಿತು. ನಿರ್ಮಾಣ ಆರಂಭಿಸಿದ್ದೆವು. ಕೋವಿಡ್ ಗೂ ಮುನ್ನ ಆರಂಭವಾದ ಚಿತ್ರವಿದು. ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ‘ಶಿವಮ್ಮ’ ಬಿಡುಗಡೆಯಾದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈವರೆಗೂ ಹದಿನೇಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ “ಶಿವಮ್ಮ” ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ. ಜನರಿಗೂ ಈ ಚಿತ್ರ ಇಷ್ಟವಾಗಲಿದೆ” ಎಂದು ನಿರ್ಮಾಪಕ ರಿಷಬ್ ಶೆಟ್ಟಿ ಹೇಳಿದರು.
”ಉತ್ತರ ಕರ್ನಾಟಕದ ಯರೇಹಂಚಿನಾಳ ಊರಿನವರಾದ ಶರಣಮ್ಮ ಚಟ್ಟಿ “ಶಿವಮ್ಮ”ನ ಪಾತ್ರಕ್ಕೆ ಆಯ್ಕೆಯಾದರು. ಅದೇ ಊರಿನ ಹೆಚ್ಚಿನ ಜನರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಬಿಡುಗಡೆಗೂ ಮುನ್ನ ಒಂದು ವರ್ಷದಿಂದ ಸಾಕಷ್ಟು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನವಾಗಿದೆ. ಜೂನ್ 14 ಚಿತ್ರ ಬಿಡುಗಡೆಯಾಗುತ್ತಿದೆ” ಎಂದು ನಿರ್ದೇಶಕ ಜೈಶಂಕರ್ ಆರ್ಯರ್ ತಿಳಿಸಿದರು.
“ಶಿವಮ್ಮ” ಪಾತ್ರಧಾರಿ ಶರಣಮ್ಮ ಚಟ್ಟಿ, ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ ಹಾಗೂ ಶೃತಿ ಕೊಂಡೇನಹಳ್ಳಿ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ಪ್ರಮೋದ್ ಶೆಟ್ಟಿ ಚಿತ್ರಕ್ಕೆ ಶುಭ ಕೋರಿದರು.
ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ 17ಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ.
Be the first to comment