ಕಿಶೋರ್ ಕುಮಾರ್ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.
ಮಾರ್ಚ್ 1ರಿಂದ 8ರ ತನಕ 2024-2025ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯಲಿದೆ. ಕಿಶೋರ್ ಕುಮಾರ್ ಅವರನ್ನು ಬೆಂಗಳೂರು ಫಿಲ್ಮ್ ಫೆಸ್ಟಿವಲ್ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ನಟ ಕಿಶೋರ್ ಕುಮಾರ್ ಗೆ ಅಭಿನಂದನೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಬರೆದಿದ್ದಾರೆ.
ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುತ್ತಮ ಸಿನಿಮಾಗಳು ಪ್ರದರ್ಶನಗೊಳ್ಳಲಿದೆ. ಚಿತ್ರಗಳ ಕುರಿತಂತೆ ವಿಚಾರ ಸಂಕಿರಣಗಳು ಕೂಡ ನಡೆಯಲಿವೆ. ಈ ಬಾರಿ 9 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.
ಈ ವರ್ಷದ ಚಲನಚಿತ್ರೋತ್ಸವದ ಥೀಮ್ ʻಸರ್ವ ಜನಾಂಗದ ಶಾಂತಿಯ ತೋಟʼ ಆಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.
Be the first to comment