ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ ಕಂಟೆಂಟ್ ಆಧರಿತ ಸಿನಿಮಾ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
‘ಇದೊಂದು ಹೊಸ ಥರದ ಪಾತ್ರ. ಇಲ್ಲಿಯವರೆಗೆ ನಾನೆಂದೂ ಈ ಥರದ ಪಾತ್ರಗಳನ್ನು ಮಾಡಿರಲಿಲ್ಲ. ಹಳ್ಳಿಯ ಹೆಣ್ಣು ಮಗಳೊಬ್ಬಳು ತನ್ನ ಊರಿನ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ವ್ಯವಸ್ಥೆಯಲ್ಲಿ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಹೇಗೆ ಎದುರಿಸಿ ಬಡ ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸುತ್ತಾಳೆ ಎಂಬುದು ನನ್ನ ಪಾತ್ರ. ನಾನು ಪಾರ್ವತಿ ಎಂಬ ಹಳ್ಳಿಯ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಮೊದಲ ಬಾರಿಗೆ ಕರ್ನಾಟಕದ ಅಪ್ಪಟ ಗ್ರಾಮೀಣ ಸೊಗಡಿನ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ತುಂಬ ಎಕ್ಸೈಟ್ ಆಗಿದ್ದೇನೆ’ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಿನಿಮಾದ ಧ್ವನಿಮುದ್ರಣ ಕಾರ್ಯವನ್ನು ಆರಂಭಿಸಿದ್ದ ಚಿತ್ರತಂಡ ಇದೀಗ ಹಾಡುಗಳ ಕೆಲಸವನ್ನು ಪೂರ್ಣಗೊಳಿಸಿ ಚಿತ್ರೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ. . ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಹಿರಿಯ ನಟ ಶ್ರೀನಾಥ್ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು.
ನಾಗರೀಕ ಸರಬರಾಜು ಖಾತೆ ಸಚಿವ ಕೆ. ಹೆಚ್. ಮುನಿಯಪ್ಪ, ಶಾಸಕ ಎಲ್. ಶಿವರಾಮೇ ಗೌಡ, ‘ಕರ್ನಾಟಕ ರಾಜ್ಯ ಪಡಿತರ ವಿತರಕರ ಒಕ್ಕೂಟ’ದ ಅಧ್ಯಕ್ಷ ಟಿ. ಕೃಷ್ಣಪ್ಪ, ನಿರ್ಮಾಪಕ ಭಾ. ಮ. ಹರೀಶ್, ಭಾ. ಮ. ಗಿರೀಶ್ ಸೇರಿದಂತೆ ಅನೇಕರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ ಕುಮಾರ್ ಬಂಗಾರಪ್ಪ, ದೊಡ್ಡಣ್ಣ ಮೊದಲಾದ ಕಲಾವಿದರು ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ‘ಜಯಶಂಕರ ಟಾಕೀಸ್’ ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಎಸ್. ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾಕ್ಕೆ ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಬರೆದಿದ್ದಾರೆ. ‘ತಾಯವ್ವ’ ಸಿನಿಮಾವನ್ನು ನಿರ್ದೇಶಿಸಿದ್ದ ಸಾತ್ವಿಕ್ ಪವನ್ ಕುಮಾರ್ ಈ ಸಿನಿಮಾಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಅನಂತ ಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ.

Be the first to comment