ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಇಂದು ವಿಶ್ವದಾದ್ಯಂತ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿಅದ್ಧೂರಿಯಾಗಿ ಬಿಡುಗಡೆಯಾಗಿದೆ.
ಮುಂಜಾನೆ 6 ಗಂಟೆಯಿಂದಲೇ ಹಲವು ಚಿತ್ರಮಂದಿರಗಳಲ್ಲಿ ಶೋ ಆರಂಭವಾಗಿದೆ. ಜಾಗತಿಕವಾಗಿ ‘ಟಾಕ್ಸಿಕ್’ ತೆರೆ ಕಂಡಿದ್ದು, ವಿಶ್ವದಾದ್ಯಂತ ಯಶ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಚಿತ್ರಮಂದಿರಗಳ ಮುಂದೆ ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿದ್ದಾರೆ. ಯಶ್ ಕಟೌಟ್‌ಗಳಿಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದ್ದಾರೆ.
‘ಟಾಕ್ಸಿಕ್’ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಬಳಿಕ ಇತರ ಪ್ರಮುಖ ಭಾಷೆಗಳಿಗೆ ಡಬ್ ಮಾಡಲಾಗಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಸರ್ಟಿಫಿಕೇಟ್ ದೊರೆತಿದ್ದು, 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಸಿನಿಮಾ ವೀಕ್ಷಿಸಲು ಅವಕಾಶವಿದೆ. ಕರ್ನಾಟಕ ಸೇರಿದಂತೆ ಮುಂಬೈ, ಗೋವಾ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಚಿತ್ರ ಬಿಡುಗಡೆಯಾಗಿದೆ. ಅಮೆರಿಕ, ಕೆನಡಾ, ಗಲ್ಫ್ ರಾಷ್ಟ್ರಗಳು, ಆಸ್ಟ್ರೇಲಿಯಾ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸಿನಿಮಾ ತೆರೆ ಕಂಡಿದೆ.
ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಹಾಗೂ ತಾರಾ ಸುತಾರಿಯಾ ಸೇರಿದಂತೆ ಹಲವು ಪ್ರಮುಖ ಕಲಾವಿದರು ಅಭಿನಯಿಸಿದ್ದಾರೆ.
ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್‌ಗಳ ಅಡಿಯಲ್ಲಿ ಮೂಡಿಬಂದಿರುವ ‘ಟಾಕ್ಸಿಕ್’ ಸಿನಿಮಾ ಮೊದಲ ದಿನವೇ ಸಿನಿಮಾ 100 ಕೋಟಿ ಗಡಿ ತಲುಪುವ ನಿರೀಕ್ಷೆ ವ್ಯಕ್ತವಾಗಿದೆ.
—-





Be the first to comment