ಅಪ್ರಾಪ್ತ ಮಕ್ಕಳ ಎದುರು ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಲಯಾಳಂ ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ಶ್ರೀಜಿತ್ ರವಿಗೆ ನ್ಯಾಯಾಲಯ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
2022ರ ಪೋಕ್ಸೊ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತ್ರಿಶೂರ್ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ 50 ಸಾವಿರ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.
ನ್ಯಾಯಾಧೀಶೆ ರಮ್ಯಾ ಮೆನನ್ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509, ಪೋಕ್ಸೊ ಕಾಯ್ದೆಯಡಿ ಶ್ರೀಜಿತ್ ರವಿ ತಪ್ಪಿತಸ್ಥ ಎಂದು ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ತೀರ್ಪಿನ ಬೆನ್ನಲ್ಲೇ ನಟನ ಪರ ವಕೀಲರು ಕೇರಳ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ. ಇಬ್ಬರು ಶ್ಯೂರಿಟಿಗಳು ಮತ್ತು 50 ಸಾವಿರ ರೂ.ಬಾಂಡ್ ಆಧಾರದ ಮೇಲೆ ನಟನಿಗೆ ಜಾಮೀನು ನೀಡಲಾಗಿದೆ. ಡಿಸೆಂಬರ್ 23ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
2022ರ ಜುಲೈ 4ರಂದು ಶಾಲೆ ಮುಗಿಸಿ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ಬಾಲಕಿಯರಿಗೆ ಮರ್ಮಾಂಗ ಪ್ರದರ್ಶಸಿ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಶ್ರೀಜಿತ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಅವರ ಅರ್ಜಿಗಳನ್ನು ವಜಾಗೊಳಿಸಿದ್ದವು.
50 ವರ್ಷದ ಶ್ರೀಜಿತ್ ರವಿ 2005ರಿಂದ ಮಲಯಾಳಂ ಮತ್ತು ತಮಿಳು ಸಿನಿಮಾಗಳಲ್ಲಿ ಪೋಷಕ ಹಾಗೂ ಖಳನಾಯಕನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ.
—–





Be the first to comment