ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿತ್ತು.
ಬ್ಯಾಂಕ್ ಜನಾರ್ಧನ್ ಅವರು 40 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ಮಿಂಚಿದ್ದರು.
ಜನಾರ್ಧನ್ ಅವರು ಸಿನಿಮಾ ರಂಗಕ್ಕೂ ಬರುವ ಮೊದಲು ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಎಸ್ ಎಸ್ ಎಲ್ ಸಿ ಪಾಸ್ ಆಗಿ ಬ್ಯಾಂಕ್ ಕೆಲಸಕ್ಕೆ ಸೇರಿಕೊಂಡರು. ಹಿರಿಯ ನಟ ಧೀರೇಂದ್ರ ಗೋಪಾಲ್ ಅವರ ಸಹಕಾರದಿಂದ ಚಿತ್ರರಂಗಕ್ಕೆ ಬಂದರು. ‘ಊರಿಗೆ ಉಪಕಾರಿ’ ಜನಾರ್ಧನ್ ನಟಿಸಿದ ಮೊದಲ ಚಿತ್ರ. ಚಿತ್ರರಂಗದಲ್ಲಿ ಅವಕಾಶ ಹೆಚ್ಚಾದಂತೆ ಜನಾರ್ಧನ್ ಅವರು ಬ್ಯಾಂಕ್ ಕೆಲಸ ಬಿಟ್ಟರು.
ಕನ್ನಡ ಸಿನಿಮಾಗಳಲ್ಲಿ 80- 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಅವರು ಉಪೇಂದ್ರ ನಿರ್ದೇಶನದ ಶ್ ಸಿನಿಮಾ, ತರ್ಲೆ ನಾನ್ ಮಗ , ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ, ಗೌರವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಗಮನ ಸೆಳೆದಿದ್ದರು. 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಗಿಸಿದ್ದರು.
ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಚಿತ್ರಪ್ರೇಮಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Be the first to comment