ಕನ್ನಡದ ಖ್ಯಾತ ನಟ ಅನಂತ್ ನಾಗ್ ಅವರಿಗೆ ನವದೆಹಲಿಯಲ್ಲಿ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.
2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ ಹೆಸರನ್ನು ಘೋಷಿಸಲಾಗಿತ್ತು. ಕುರ್ತಾ ಧರಿಸಿ ಬಂದಿದ್ದ ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಅವರ ಕುಟುಂಬ ಸದಸ್ಯರು ಸಂತೋಷ ವ್ಯಕ್ತಪಡಿಸಿದರು.
ಅನಂತ್ ನಾಗ್ ಚಿತ್ರರಂಗ ಮಾತ್ರವಲ್ಲದೆ ರಾಜಕೀಯದಲ್ಲೂ ಸಕ್ರಿಯರಾಗಿದ್ದರು. ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಕಲಾ ರಂಗದಲ್ಲಿ ಅವರ ಸೇವೆಯನ್ನು ಗುರುತಿಸಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.
ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಈ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ.
ಕಲಬುರಗಿ ಮೂಲದ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ, ಕೊಪ್ಪಳ ಮೂಲದ ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ 96 ವರ್ಷದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಸೇರಿದಂತೆ 71 ಮಂದಿ ಸಾಧಕರಿಗೆ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.
ಈ ವರ್ಷ 7 ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿದಂತೆ 13 ಮರಣೋತ್ತರ ಪ್ರಶಸ್ತಿ ನೀಡಲಾಗಿದೆ.
—–

Be the first to comment