ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪುಣ್ಯಕೋಟಿಯ ರಾಯಭಾರಿಯಾಗಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ.
ಸುದೀಪ್ ಅವರನ್ನು ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪ್ರಭು ಚವ್ಹಾಣ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿದ್ದೀರಿ. ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಅವರು ಪತ್ರ ಬರೆದಿದ್ದಾರೆ.
ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ನಟ ಸುದೀಪ್ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.
___
Be the first to comment