ಸಾಮಾಜಿಕ ಸೇವೆಯತ್ತ ಹೆಜ್ಜೆ ಇಟ್ಟಿರುವ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ದಂಪತಿ ದೇವರಕೊಂಡ ಚಾರಿಟೇಬಲ್ ಟ್ರಸ್ಟ್ ಮೂಲಕ 180 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿದ್ದಾರೆ.
ದೇವರಕೊಂಡ ಚಾರಿಟೇಬಲ್ ಟ್ರಸ್ಟ್ ಮೂಲಕ ಅಚ್ಚಂಪೇಟೆ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗೆ ದಂಪತಿ ಚಾಲನೆ ನೀಡಿದ್ದಾರೆ. ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ 180 ವಿದ್ಯಾರ್ಥಿಗಳ ಪಟ್ಟಿಯನ್ನು ವಿಜಯ್ ದೇವರಕೊಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
‘9 ಮತ್ತು 10ನೇ ತರಗತಿಯ ಪ್ರತಿಭಾವಂತ ಹಾಗೂ ಕಠಿಣ ಪರಿಶ್ರಮಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆರಂಭಿಸಲಾಗಿದೆ. ಇದು ಸಣ್ಣ ನೆರವಾಗಿರಬಹುದು. ಆದರೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ. ನಮ್ಮ ಊರಿನಿಂದ ಆರಂಭವಾದ ಈ ಪ್ರಯತ್ನ ಮುಂದಿನ ದಿನಗಳಲ್ಲಿ ತೆಲಂಗಾಣದಾದ್ಯಂತ ವಿಸ್ತರಿಸಬೇಕು ಎಂಬುದು ನಮ್ಮ ಕನಸು’ ಎಂದು ದೇವರಕೊಂಡ ತಿಳಿಸಿದ್ದಾರೆ.
‘ಶಿಕ್ಷಣದ ಮೂಲಕ ಮಕ್ಕಳ ಬದುಕಿನಲ್ಲಿ ಬದಲಾವಣೆ ತರಬೇಕೆಂಬ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವುದು ತಮ್ಮ ಪ್ರಮುಖ ಗುರಿ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.
ಫೆಬ್ರವರಿ 2026ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ದೇವರಕೊಂಡ- ಮಂದಣ್ಣ ದಂಪತಿ, ಶಿಕ್ಷಣ ಕ್ಷೇತ್ರದಲ್ಲಿ ಸೇವಾ ಕಾರ್ಯ ಆರಂಭಿಸಿರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
—–





Be the first to comment