ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ 2019ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಸುದೀಪ್ ಪೋಸ್ಟ್ ಮಾಡಿದ್ದು, ಪ್ರಶಸ್ತಿಯನ್ನು ನಿರಾಕರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ತೀರ್ಪುಗಾರರಿಗೆ ಕ್ಷಮೆ ಕೋರಿದ್ದಾರೆ.
‘ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಧನ್ಯವಾದಗಳು. ಆದರೆ ನಾನು ಹಲವಾರು ವರ್ಷಗಳಿಂದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿಲ್ಲ. ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನ್ನನ್ನು ಹೊರತುಪಡಿಸಿ ಅನೇಕ ಅರ್ಹ ನಟರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ನನಗಿಂತ ಹೆಚ್ಚಾಗಿ ಅವರಿಗೇ ಈ ಪ್ರಶಸ್ತಿ ಸಿಗಬೇಕು. ಅವರಲ್ಲಿ ಒಬ್ಬರು ಇದನ್ನು ಸ್ವೀಕರಿಸುವುದನ್ನು ನೋಡುವುದು ನನಗೆ ಹೆಚ್ಚು ಸಂತೋಷ ನೀಡುತ್ತದೆ’ ಎಂದಿದ್ದಾರೆ.
” ಜನರನ್ನು ರಂಜಿಸುವ ನನ್ನ ಕೆಲಸ ಯಾವಾಗಲೂ ಮುಂದುವರಿಯುತ್ತದೆ. ನಾನು ಯಾವುದೇ ಪ್ರಶಸ್ತಿಗಳ ನಿರೀಕ್ಷೆಯನ್ನು ಇಟ್ಟುಕೊಂಡಿಲ್ಲ. ತೀರ್ಪುಗಾರರು ನನ್ನನ್ನು ಆಯ್ಕೆ ಮಾಡಿರುವುದು ನಾನು ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ನನಗೆ ಉತ್ತೇಜನ ನೀಡುತ್ತದೆ” ಎಂದು ತಿಳಿಸಿದ್ದಾರೆ.
”ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಕೃತಜ್ಞನಾಗಿದ್ದೇನೆ. ನನ್ನ ಈ ನಿರ್ಧಾರದಿಂದ ಯಾವುದೇ ನಿರಾಶೆ ಉಂಟಾದರೆ, ಅದಕ್ಕಾಗಿ ನಾನು ತೀರ್ಪುಗಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ. ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ. ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಮತ್ತೊಮ್ಮೆ ತೀರ್ಪುಗಾರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದಿದ್ದಾರೆ.
‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Be the first to comment