‘ದೇವರಾಯ’ನಾಗಿ ಸುದೀಪ್

ಕಿಚ್ಚ ಸುದೀಪ್ ಅವರ ಜನ್ಮದಿನದ ಸಂಭ್ರಮದಲ್ಲಿ ಐತಿಹಾಸಿಕ ಪ್ರಾಜೆಕ್ಟ್ ‘ದೇವರಾಯ’ ಅಧಿಕೃತವಾಗಿ ಘೋಷಣೆಯಾಗಿದೆ.

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹಾಗೂ ಪ್ರಿಯಾ ಸುದೀಪ್ ಒಡೆತನದ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋಸ್’ ಜಂಟಿಯಾಗಿ ಈ ಬೃಹತ್ ಕ್ಯಾನ್ವಾಸ್‌ನ ಸಿನಿಮಾವನ್ನು ನಿರ್ಮಿಸಲು ಮುಂದಾಗಿವೆ.

ವಿಜಯನಗರ ಸಾಮ್ರಾಜ್ಯವನ್ನು ಸುವರ್ಣ ಯುಗಕ್ಕೆ ಕೊಂಡೊಯ್ದು ಹೆಸರಾದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ಪಾತ್ರದಲ್ಲಿ ಸುದೀಪ್ ಬಣ್ಣ ಹಚ್ಚಲಿದ್ದಾರೆ. ಇಂದಿನ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅದ್ದೂರಿ ಮೇಕಿಂಗ್‌ನೊಂದಿಗೆ ಮೂಡಿಬರಲಿರುವ ಈ ಚಿತ್ರ  ಸುದೀಪ್ ಅವರ ಸಿನಿಪಯಣದಲ್ಲೇ  ದೊಡ್ಡ ಮೈಲಿಗಲ್ಲಾಗುವ ಎಲ್ಲ ಲಕ್ಷಣಗಳನ್ನೂ ಹೊಂದಿದೆ.

ಪ್ರಿಯಾ ಸುದೀಪ್ ಅರ್ಪಿಸುತ್ತಿರುವ ಈ ಚಿತ್ರಕ್ಕೆ ಟಿ.ಜಿ. ವಿಶ್ವಪ್ರಸಾದ್‌ ಹಾಗೂ ಕೃತಿ ಪ್ರಸಾದ್‌ ಬಂಡವಾಳ ಹೂಡುತ್ತಿದ್ದಾರೆ. ತೆಲುಗಿನಲ್ಲಿ ‘ಕಾರ್ತಿಕೇಯ 2’, ‘ಧಮಾಕಾ’, ‘ಬ್ರೋ’ ಹಾಗೂ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’  ಪ್ಯಾನ್-ಇಂಡಿಯಾ ಮತ್ತು ಬಿಗ್-ಬಜೆಟ್ ಚಿತ್ರಗಳನ್ನು ನಿರ್ಮಿಸಿ ಜನಪ್ರಿಯತೆ ಗಳಿಸಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಕನ್ನಡದಲ್ಲೂ ಭದ್ರವಾಗಿ ನೆಲೆವೂರಲು ಸಜ್ಜಾಗಿದೆ.

ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಮೂಲಕ ಅಭಿಮಾನಿಗಳಲ್ಲಿ ರೋಮಾಂಚನ ಸೃಷ್ಟಿಸಿರುವ ಚಿತ್ರತಂಡ, ಈ   ಚಿತ್ರವನ್ನು ನಿರ್ದೇಶನ ಮಾಡುವುದು ಯಾರು ಎಂಬುದನ್ನು ಸದ್ಯಕ್ಕೆ ಗೌಪ್ಯವಾಗಿಟ್ಟಿದೆ. ‘ದೇವರಾಯ’ ಚಿತ್ರವನ್ನು 2027ರ ಡಿಸೆಂಬರ್‌ನಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ತಂಡ ಯೋಜನೆ ರೂಪಿಸಿಕೊಂಡಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!